ಬೆಂಗಳೂರು, (www.thenewzmirror.com) ;
ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವ ಬದಲು ಬೇರೆ ಮಹನೀಯರ ಹೆಸರನ್ನ ಇಡುವಂತೆ ಮಾಜಿ ಸಿಎಂ ಬಿಎಸ್ ವೈ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಈ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನ ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು. ಇದು ಭಾರೀ ಚರ್ಚೆಗೂ ಕಾರಣವಾಗಿತ್ತು.
ಇದರ ಬೆನ್ನಲ್ಲೇ ಇದೀಗ ಸಿಎಂ ಗೆ ಪತ್ರ ಬರೆದಿರೋ ಬಿಎಸ್ ವೈ, ಸುದೀರ್ಘ ಪತ್ರ ಬರೆದು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.
ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಪತ್ರದಲ್ಲಿ ಸಿಎಂ ಬೊಮ್ಮಾಯಿಯವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೋರಿದ್ದಾರೆ.