ಬೆಂಗಳೂರು, (www.thenewzmirror.com) :
ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್.ನಾರಾಯಣಾಚಾರ್ಯ (88) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದ ಅವ್ರು, ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದಲ್ಲದೇ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ KSN, ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು, ಪ್ರಚಾರಕರು ಮತ್ತು ಪ್ರವಚನಕಾರರಾಗಿದ್ದರು.
ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಕನಕನಹಳ್ಳಿಯವರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ, ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು.
ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. ಸಂಸ್ಕೃತ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತರು. ಸುಮಾರು 180ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದು, ಸುಮಾರು 200ಕ್ಕೂ ಅಧಿಕ ಉಪನ್ಯಾಸಗಳನ್ನು ನೀಡಿದ್ದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪ ಸೂಚಿಸಿದ್ದು, ಪ್ರೊ.ಕೆ.ಎಸ್.ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನ ಅವರು ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.