ಬೆಂಗಳೂರು, (www.thenewzmirror.com) :
ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಚಂಪಾ (83) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ನಿಧನರಾಗಿದ್ದಾರೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18 ರಂದು ಜನಿಸಿದ ಚಂದ್ರಶೇಖರ್ ಪಾಟೀಲ್, ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತಿ ಪಡೆದಿದ್ದರು.
ಚಂಪಾರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ಮಾಡಿದರು. ಅವ್ರ ತಂದೆಗೆ ಇಂಗ್ಲಿಷ್ ಬಗ್ಗೆ ಅಪಾರ ಅಭಿಮಾನ ಇದ್ದಿದ್ದರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮ ಪಡೆದರು.
ಚಂದ್ರಶೇಖರ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿದ್ದರು. ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದ ಕವನಗಳು; ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದ ನಾಟಕಗಳಿಂದ ಚಂಪಾ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.
ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದವರು ಚಂಪಾ.
ನಂತರ 2004-08ರ ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕೊಡೆಗಳು, ಅಪ್ಪಾ, ಗುರುತಿನವರು, ಟಿಂಗರ ಬುಡ್ಡಣ್ಣ, ಕತ್ತಲ ರಾತ್ರಿ, ಗೋಕರ್ಣದ ಗೌಡಸಾನಿ, ನಾಟಕಗಳನ್ನು, ಬಾನುಲಿ, ಮಧ್ಯಬಿಂದು, ಇತ್ಯಾದಿ ಕವನಗಳನ್ನು ಹಾಗೇ ವಿಮರ್ಶಾ ಪ್ರಭಂದಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿ ಅಜರಾಮರರಾಗಿದ್ದಾರೆ.
ಚಂಪಾ ನಿಧನಕ್ಕೆ ಸಿಎಂ ಸಂತಾಪ:
ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಕೋರಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ಹಿರಿಯರು, ಗಣ್ಯರು, ಅಭಿಮಾನಿಗಳು ಸೇರಿದಂತೆ ರಾಜಕೀಯ ಹಿರಿಯ ನಾಯಕರು ಚಂಪಾ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.