ಬೆಂಗಳೂರು(www.thenewzmirror.com):ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ನಿಧನದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥವಾಗಿ ಆಗಸ್ಟ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್,ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕ ಹಾಗು ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಪಕ್ಷದ ವತಿಯಿಂದ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ ಎಂದರು.
ಆಗಸ್ಟ್ 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.
“ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದರು.
ಶಾಸಕಾಂಗ ಸಭೆ ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮದ ಉದ್ದೇಶಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವ ಶಾಸಕರ ಜೊತೆ ಚರ್ಚೆ ಮಾಡಲು ನಮ್ಮ ನಾಯಕರು ಹೇಳಿದ್ದಾರೆ” ಎಂದು ಸ್ಪಷಪಡಿಸಿದರು.







