ಬೆಂಗಳೂರು(www.thenewzmirror.com):ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಸಧ್ಯಕ್ಕೆ ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಇಂದಿನಿಂದ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
“ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು.
ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳನ್ನು ಬಾಡಿಗೆ ಪಡೆಯುವ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡಿದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ ಎಚ್ ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು.
ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ತಿಳಿದಿಲ್ಲ. ಇದಕ್ಕೆ ಸಂಬಂಧಪಟ್ಟ ಸಚಿವರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ” ಎಂದರು.







