ತುಮಕೂರು(www.thenewzmirror.com):ಶೋಷಿತ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಸಮಾಜದಲ್ಲಿ ಮಹತ್ತರ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಸರಸ್ವತಿಪುರಂನಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ಬಂಜಾರ ಸೇವಲಾಲ್ ಭವನದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು,ಲಂಬಾಣಿ ಸಮುದಾಯದ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಅನುದಾನ ಒದಗಿಸಲು ಬದ್ಧವಾಗಿದ್ದು, ಶೋಷಿತ ಸಮುದಾಯಗಳನ್ನು ಸಾಮಾಜಿಕವಾಗಿ ಮೇಲಕ್ಕೆತ್ತುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದ್ವನಿ ಇಲ್ಲದವರಿಗೆ, ದ್ವನಿ ನೀಡುವಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಗ್ಯಾರೆಂಟಿ ಯೋಜನೆಗಳ ಜಾರಿಯ ನಡುವೆಯೂ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಲ್ಲದೆ ಮುಂದುವರಿಯುತ್ತಿವೆ. ಜಿಲ್ಲೆಯಲ್ಲಿ ಬಂಜಾರ ಸಮುದಾಯ ಹಾಗೂ ಗೊಲ್ಲರಹಟ್ಟಿಗಳನ್ನು ಒಳಗೊಂಡಂತೆ ಒಟ್ಟು 90 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಸರ್ಕಾರ ಘೋಷಿಸಿ ಅವರಿಗೆ ಮೂಲ ಸೌಕರ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ , ಉಪ ಸಭಾಪತಿಗಳಾದ ರುದ್ರಪ್ಪ ಲಮಾಣಿ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯ್ಕ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮುಂತಾದವರು ಉಪಸ್ಥಿತರಿದ್ದರು.






