ಬೆಂಗಳೂರು(www.thenewzmirror.com): ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಹೊಸ ಸಾರಥಿಯನ್ನು ಘೋಷಿಸಿದೆ. ಹಿರಿಯ ನಾಯಕ ಹಾಗೂ ಮುತ್ಸದ್ದಿ ರಾಜಕಾರಣಿ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ.
ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕೇಂದ್ರ ಕಚೇರಿಯಿಂದ ಇಂದು ಸಂಜೆ ಈ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಕಾರಣಕ್ಕೆ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ಮುಕ್ತರಾಗಿದ್ದು, ತೆರವಾದ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದೆ.
ಇದೇ ವೇಳೆ, ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ ನಿಕಟಪೂರ್ವ ಅಧ್ಯಕ್ಷ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಪಾರ ಸಂಘಟನಾತ್ಮಕ ಕೊಡುಗೆಯನ್ನು ಕಾಂಗ್ರೆಸ್ ಹೈಕಮಾಂಡ್ ಮುಕ್ತಕಂಠದಿಂದ ಶ್ಲಾಘಿಸಿದೆ. ‘ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ’ ಎಂಬ ತತ್ವದ ಆಧಾರದ ಮೇಲೆ ಹಾಗೂ ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯ ಕಾಯ್ದುಕೊಳ್ಳುವ ದೃಷ್ಟಿಯಿಂದ ಹೈಕಮಾಂಡ್ ಈ ಮಹತ್ವದ ಸಾಂಸ್ಥಿಕ ಬದಲಾವಣೆ ಮಾಡಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.






