ಬೆಂಗಳೂರು(www.thenewzmirror.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಅಂದರೆ ಏಪ್ರಿಲ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಜ್ಞಾನಜ್ಯೋತಿ ಸಭಾಂಗಣದ ಸೆಮಿನಾರ್ ಹಾಲ್ ನಲ್ಲಿ ವರನಟ ಡಾ. ರಾಜ್ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ರವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ. ಎಸ್ ಲತಾಕುಮಾರಿ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಸಚಿವರಾದ ಜವರೇಗೌಡ.ಟಿ ಅವರು ಭಾಗವಹಿಸುವರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಜಲಜ ಕೆ.ಆರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತರಾದ ಡಾ.ಮಂಜುನಾಥ ಎಂ.ಅದ್ದೆ ರವರು “ಕನ್ನಡ ಸಾಂಸ್ಕೃತಿಕ ಜಗತ್ತಿನ ಮೇಲೆ ಡಾ.ರಾಜ್ಕುಮಾರ್ ಅವರ ಪ್ರಭಾವ” ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ ಬೆಂಗಳೂರು ನಗರ ಜಿಲ್ಲೆಯ ಫಲಾನುಭವಿಗಳ ಯಶೋಗಾಥೆಗಳ ಸಂಗ್ರಹದ ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುವುದು. ರಾಜಾಜಿನಗರದ ಎಸ್.ಜೆ.ಆರ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡುವರು. ಜೋಗಿಲ ಸಿದ್ಧರಾಜು ಅವರ “ಸಂಭ್ರಮ” ಕಲಾತಂಡದ ವತಿಯಿಂದ ಡಾ. ರಾಜ್ಕುಮಾರ್ ಅವರ ಜನಪ್ರಿಯ ಚಲನಚಿತ್ರ ಗೀತಗಾಯನವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರಂಭದಲ್ಲಿ ಡಾ. ರಾಜ್ಕುಮಾರ್ ಅಭಿಮಾನಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬೆಂಗಳೂರು ನಗರ ಜಿಲ್ಲೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಕೋರಿದ್ದಾರೆ.