ಬೆಂಗಳೂರು(www.thenewzmirror.com): ಕಲಬುರಗಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ-ಪಿಯುಸಿ ಪರೀಕ್ಷೆಗಳ ಫಲಿತಾಂಶಗಳ ಸುಧಾರಣೆಗಾಗಿ ನೀಲನಕ್ಷೆ ತಯಾರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬುದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಣಾಮ ಬೀರುತ್ತವೆ ಎನ್ನುವುದನ್ನೂ ಸಹ ಒಪ್ಪಿಕೊಳ್ಳಬೇಕಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಹಾಗೂ ಹಾಗೂ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತರೊಂದಿಗೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು ಕಲಬುರಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಬೇಕಾದ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಿದರು.
ಕಲಬುರಗಿ ಜಿಲ್ಲೆಯಲ್ಲಿನ ಶೈಕ್ಷಣಿಕ ಸ್ಥಿತಿಯನ್ನು ಉತ್ತಮಗೊಳಿಸುವ ಕೆಲಸ ನಾವು ಮಾಡಲೇಬೇಕಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ನ್ಯೂನ್ಯತೆಗಳನ್ನು ಅಧ್ಯಯನ ಮಾಡಿ ಪರಿಹಾರಗಳ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕು ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು. ಈ ಶೈಕ್ಷಣಿಕ ವರ್ಷಕ್ಕೆ ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಸಂತೆ ನೀಲನಕ್ಷೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.