ಪಂಚಾಯತ್ ಚುನಾವಣೆಗೆ ಸಿದ್ದತೆ, ಜಿಲ್ಲಾ ಪ್ರವಾಸ ಮಾಡಿ ಸಂಘಟನೆ ಬಲಪಡಿಸಲು ಬಿಜೆಪಿ ಕೋರ್ ಕಮಿಟಿ ನಿರ್ಧಾರ

RELATED POSTS

ಬೆಂಗಳೂರು(www.thenewzmirror.com): ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಮಾಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೋರ್ ಕಮಿಟಿಯ ಎಲ್ಲ ಸದಸ್ಯರು ಭಾಗವಹಿಸಿದ್ದರು. ಅನೇಕ ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಿದ್ದೇವೆ. ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಮಾಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚಿಸಿದ್ದೇವೆ ಎಂದು ವಿವರಿಸಿದರು.

ಪೆಹಲ್ಗಾಂ ಘಟನೆಯ ನಂತರ ನಮ್ಮ ಯೋಧರು ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ಅಡಗುದಾಣಗಳನ್ನು ನಾಶಪಡಿಸಿದ್ದಾರೆ. ಈ ಮೂಲಕ ಇಡೀ ಜಗತ್ತಿಗೆ ಭಾರತದ ಶಕ್ತಿಯನ್ನು ತೋರಿಸಿದ್ದಾರೆ. ಇಂಥ ದಿಟ್ಟ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಸೇನಾಪಡೆಗಳನ್ನು ಸಭೆಯು ಅಭಿನಂದಿಸಿದೆ ಎಂದು ವಿವರಿಸಿದರು. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಇವತ್ತಿನ ಸಭೆಯಲ್ಲಿ ಎಲ್ಲ ಹಿರಿಯ ಸದಸ್ಯರು ಅಭಿಪ್ರಾಯ ನೀಡಿದ್ದಾರೆ ಎಂದರು.

ಅಧಿಕಾರದ ಮದದಿಂದ ಮೆರೆಯುವ ಸರಕಾರ

ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರ ಇದೆ ಎಂದು ಮದದಿಂದ ಮೆರೆಯುತ್ತಿದೆ. ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆಗಿದೆ. ನಂತರ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರನ್ನು ಬಂಧಿಸುವ ಷಡ್ಯಂತ್ರ ನಡೆದಿದೆ. ಗುಲ್ಬರ್ಗದಲ್ಲಿ ನಮ್ಮ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಜೊತೆ ಗೂಂಡಾವರ್ತನೆ ತೋರಿದ್ದಾರೆ ಎಂದು ಆಕ್ಷೇಪಿಸಿದರು.

ಬಿಜೆಪಿ ಮುಖಂಡ, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಅವರು ಭಾಷಣದಲ್ಲಿ, ಕೆಲವು ಮಾತುಗಳನ್ನು ಆಡಿದ್ದರು. ಬಳಿಕ ರವಿಕುಮಾರ್ ಅವರು ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದರು. ಅದರ ನಡುವೆ ಮೂರನೇ ವ್ಯಕ್ತಿ ಮೂಲಕ ದೂರು ಕೊಡಿಸಿದ್ದಾರೆ. ಎಫ್‍ಐಆರ್ ದಾಖಲಿಸಿ, ಅವಮಾನ ಹಾಗೂ ತೇಜೋವಧೆ ಮಾಡಲು ಮುಂದಾಗಿದ್ದಾರೆ. ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಇದು ನಡೆಯುತ್ತಿದೆ ಎಂದು ಟೀಕಿಸಿದರು.

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇವೆಲ್ಲಕ್ಕೂ ಬಗ್ಗಬಾರದು; ಜಗ್ಗಬಾರದು. ಭಂಡ, ಬಡವರ ವಿರೋಧಿ, ರೈತ ವಿರೋಧಿ, ಭ್ರಷ್ಟ, ಗೂಂಡಾ ಕಾಂಗ್ರೆಸ್ ಸರಕಾರದ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡಬೇಕೆಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಹೇಳಿದರು.

ಪ್ರತಿ ವಿಭಾಗಕ್ಕೆ ಒಂದು ತಂಡ ರಚಿಸಿ ಜಿಲ್ಲಾ ಪ್ರವಾಸ ಮಾಡುವ ಕುರಿತು ಯೋಜಿಸಲಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ; ಈ ಜನವಿರೋಧಿ- ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದೇ ನಮ್ಮ ಮುಂದಿರುವ ಗುರಿ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ನಮ್ಮೆಲ್ಲರ ಅಭಿಪ್ರಾಯದಂತೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು 6 ವರ್ಷ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ,ಈ 3 ಜನರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ವಿಚಾರ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿತ್ತು. ಬಳಿಕ ಕೇಂದ್ರದ ವರಿಷ್ಠರ ಗಮನಕ್ಕೂ ಇದನ್ನು ತಂದಿದ್ದೆವು ಈಗ ಉಚ್ಚಾಟನೆ ಆದೇಶವಾಗಿದೆ ಹಾಗಾಗಿ ಕೇಂದ್ರ ವರಿಷ್ಠರಿಗೆ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾಗಿ ತಿಳಿಸಿದರು

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist