ಬೀದರ್(www.thenewzmirror.com):ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಯಾವುದೇ ಕಾರಣದಿಂದಲೂ ನೇಮಕಾತಿಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು.ನೇಮಕಾತಿ ವೇಳೆ ಸಮಸ್ಯೆಗಳು ಕಂಡು ಬಂದಲ್ಲಿ, ತಕ್ಷಣವೇ ಪರಿಹರಿಸಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ಮಾಡದೆ, ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.
ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಅನೇಕ ಕಡೆ ಮಕ್ಕಳಿಗೆ ಸರಿಯಾಗಿ ಮೊಟ್ಟೆ ತಲುಪುತ್ತಿಲ್ಲ. ಹಾಲಿನ ಪೌಡರ್ ಮಾರಿಕೊಳ್ಳುತ್ತಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಅದು ನಿಜವಾಗಿದ್ದಲ್ಲಿ ಅಂಥವುಗಳಲ್ಲಿ ಎಂದಿಗೂ ಸಹಿಸಿಕೊಳ್ಳುವುದಿಲ್ಲ. ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಸಿದರು.
ಪ್ರತಿ ಅಧಿಕಾರಿಗಳು, ಸ್ಥಳೀಯ ಸಚಿವರು ಹಾಗೂ ಶಾಸಕರಿಗೆ ಇಲಾಖೆ ಕಾರ್ಯಕ್ರಮ ಮತ್ತು ಪ್ರಗತಿಯ ವಿವರಗಳನ್ನು ಕಾಲಕಾಲಕ್ಕೆ ಕಡ್ಡಾಯವಾಗಿ ನೀಡಬೇಕು ಎಂದು ಸಚಿವರು ಆದೇಶಿಸಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳಕರ್ ಅವರು ನಮ್ಮ ಸರ್ಕಾರದ ಬಹಳ ಕ್ರಿಯಾಶೀಲ ಸಚಿವರು, ಮಹಿಳೆಯರು, ಮಕ್ಕಳು, ವಿಕಲಚೇತರು ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ. ಸದಾ ಹೆಚ್ಚಿನ ಅನುದಾನಕ್ಕಾಗಿ ಪ್ರಯತ್ನಿಸುತ್ತಲೇ ಇರುತ್ತಾರೆ. ಜವಾಬ್ದಾರಿಯುತವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.
ಜಿಲ್ಲೆಯಲ್ಲಿ ಇಲಾಖೆಯಿಂದ ಆಗಬೇಕಿರುವ ಕೆಲಸ ಕಾರ್ಯಗಳ ಕುರಿತು ಅವರು ಸಭೆಯಲ್ಲಿ ಗಮನಸೆಳೆದರು. ಸಭೆ ಆರಂಭಕ್ಕೂ ಮುನ್ನ ಸಚಿವ ಈಶ್ವರ್ ಖಂಡ್ರೆ ಅವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದರು.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಒಳಗೊಂಡ ಕಲಬುರಗಿ ವಿಭಾಗದ ಮಟ್ಟದಲ್ಲಿ ಐ.ಸಿ.ಡಿ.ಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು:
ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮಕ್ಕಳ ಜತೆ ಕಾಲಕಳೆದರು.

ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಜೊತೆಗೆ ಮಕ್ಕಳ ಕಲಿಕಾ ಆಸಕ್ತಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೊಟ್ಟೆ ಗಳನ್ನು ಕೊಟ್ಟಿದ್ದಾರಾ? ಪಾಯಸ ತಿಂದಿದ್ದೀರಾ? ಎಂದು ಮಕ್ಕಳಲ್ಲಿ ವಿಚಾರಿಸಿ ಮಾಹಿತಿ ಪಡೆದ ಸಚಿವರು, ಅಂಗನವಾಡಿ ಕೇಂದ್ರದಲ್ಲಿ ತಯಾರಿಸಿದ ಚಿಕ್ಕಿಯನ್ನು ಸೇವಿಸಿ ಗುಣಮಟ್ಟ ಪರಿಶೀಲಿಸಿದರು. ಬಳಿಕ ಮೈಲೂರದಲ್ಲಿರುವ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದರು.