ಡಿಎಂಕೆ ಮುಲಾಜಿನಲ್ಲಿರುವ ಕಾಂಗ್ರೆಸ್ ನಿಂದ ಮೇಕೆದಾಟು ಜಾರಿ ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

RELATED POSTS

ಮೈಸೂರು(www.thenewzmirror.com):ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ.

ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿದೆ ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು,ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ ಎಂದು ಸಚಿವರು ಹೇಳಿದರು.

ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯ ಆಗುವುದಿಲ್ಲ. ತಮಿಳುನಾಡು ಸರ್ಕಾರವನ್ನೇ ಒಪ್ಪಿಸದೆ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು, ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದರಲ್ಲ, ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ? ಎಂದು ಅವರು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವರು ಪುನರುಚ್ಚರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ನನ್ನ ಭಯವಿದೆ, ಅದಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದೆ:

ಕಾಂಗ್ರೆಸ್ ಪಕ್ಷದವರಿಗೆ ಜನರ ಕೆಲಸ ಮಾಡುವುದು ಬಿಟ್ಟು ರಾಜಕೀಯ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆಯೇ ಆ ಪಕ್ಷಕ್ಕೆ ಅತಿಯಾದ ಭಯವಿದೆ. ಈಗಾಗಿ ಪದೇಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪ ಮಾಡುತ್ತಿರುತ್ತಾರೆ. ಬಿಜೆಪಿ – ಜೆಡಿಎಸ್ ಜೊತೆಯಾದ ಮೇಲಂತೂ ಕಾಂಗ್ರೆಸ್ ನಾಯಕರಿಗೆ  ನಿದ್ದೆಯೇ ಬರುತ್ತಿಲ್ಲ. ಈಗಾಗಿ ನನ್ನ ಮೇಲೆ ಪದೇಪದೇ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.

ಮುಂದೆ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಸಂತೋಷ. ಮುಂದಿನ ಐದು ವರ್ಷ ಅಲ್ಲದಿದ್ದರೆ ಐವತ್ತು ವರ್ಷ ಅವರೇ ಆಳ್ವಿಕೆ ಮಾಡಲಿ. ಮೊದಲು ಜನರು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದರೂ ಎನ್ನುವುದು ನನಗೆ ಗೊತ್ತಿದೆ. ಮುಂದೆ ಯಾರದ್ದು ಸರ್ಕಾರ ಎಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷವನ್ನು ಜನ ಹೇಗೆ ಒಪ್ಪುತ್ತಾರೆ? ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

ಚೆಲುವರಾಯಸ್ವಾಮಿಗೆ ತಿರುಗೇಟು:

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಸದನಾಗಿ ನಾನು ಎಷ್ಟು ಅನುದಾನ ತಂದಿದ್ದೇನೆ ಎಂಬ ಬಗ್ಗೆ ನನ್ನ ಬಗ್ಗೆ ಟೀಕೆ ಮಾಡಿರುವ ಸಚಿವ ಮಹಾಶಯರು ಮೊದಲು ಮಾಹಿತಿ ಪಡೆದುಕೊಂಡು ಮಾತಾಡಲಿ. ಕೇವಲ ಸಂಸದರ ಅನುದಾನ ತಂದಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಬರೀ ಸಂಸದರ ನಿಧಿಯಿಂದ ಹಣ ತಂದಿಲ್ಲ. ಬೇರೆ ಬೇರೆ ವಿಶೇಷ ಅನುದಾನಗಳನ್ನೇ ತಂದಿದ್ದೇನೆ. ಮಾಹಿತಿ ಇಲ್ಲದಿದ್ದರೆ ಮಾತನಾಡಬಾರದು. ನಾನು ವಿವಿಧ ಬಾಬ್ತುಗಳಿಂದ ಎಷ್ಟು ಅನುದಾನ ತಂದಿದ್ದೇನೆ ಎಂಬುದನ್ನ ಮೊದಲು ಅವರು ತಿಳಿದುಕೊಳ್ಳಲಿ. ಸಂಸದರ ಅನುದಾನ ಅಲ್ಲದೆ ಸಿಎಸ್ ಆರ್ ಮೂಲದಿಂದಲೂ ಅನುದಾನ ತಂದಿದ್ದೇನೆ ಎಂಬುದು ಮಂಡ್ಯ ಜನತೆಗೆ ಗೊತ್ತಿದೆ. ಸಚಿವರಾದವರಿಗೆ ಮಾಹಿತಿ ಇಲ್ಲದಿದ್ದರೆ ನಾನು ಏನು ಮಾಡಲು ಸಾಧ್ಯ? ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದರು.

ಪೂರ್ವ ನಿಗದಿತ ಸಭೆಗಳ ಕಾರಣಕ್ಕೆ ಬಂದಿಲ್ಲ:

ಸಚಿವರು ಸಭೆಗಳಿಗೆ ನನ್ನನ್ನು ಕರೆದಿಲ್ಲ ಎಂದಲ್ಲ. ನಾನು ಕೇಂದ್ರ ಸಚಿವನಾಗಿದ್ದೇನೆ. ಪೂರ್ವ ನಿಯೋಜಿತವಾಗಿ ಅನೇಕ ಸಭೆಗಳು ನಿಗದಿ ಆಗಿರುತ್ತದೆ. ಬೇರೆ ರಾಜ್ಯಗಳ ಪ್ರವಾಸಗಳು ಕೂಡ ಇರುತ್ತವೆ. ಆದರೂ ನಾನು ಮಂಡ್ಯ ಕ್ಷೇತ್ರಕ್ಕೆ ಆದ್ಯತೆಯ ಮೇರೆಗೆ ಭೇಟಿ ನೀಡುತ್ತಿದ್ದೇನೆ. ನನ್ನ ಪಾಲಿನ ಕೆಲಸಗಳನ್ನು ಯಾವುದೂ ಬಾಕಿ ಉಳಿಸಿಕೊಂಡಿಲ್ಲ. ಇವರು ತರಾತುರಿಯಲ್ಲಿ ಸಭೆಗಳಿಗೆ ಬನ್ನಿ ಎಂದು ಕರೆದಾಗ ಅದಕ್ಕೂ ಮೊದಲೇ ನಿಗದಿ ಆಗಿರುವ ಸಭೆಗಳು ಇರುತ್ತವೆ. ಹೀಗಾಗಿ ಅವರ ಸಭೆಗಳಿಗೆ ಹೋಗಲು ಆಗಿಲ್ಲ ಅಷ್ಟೇ. ಅದರಲ್ಲಿ ಬೇರೆ ಅರ್ಥ ಹುಡುಕುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದರು.

ಪ್ರಿಯಾಂಕ್ ಖರ್ಗೆ ಮೇಲೆ ಹೆಚ್ಡಿಕೆ ಕೆಂಡ:

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ; ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಚಾಟಿ ಬೀಸಿದರು.

ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ,  ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist