ಬೆಂಗಳೂರು,(www.thenewzmirror.com) ;
ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ಕಾಗಿ ತಿಳಿಸಿದರು.
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಂಪುಟ ಸಹೋದ್ಯೋಗಿಗಳ ಜತೆ ಶನಿವಾರ ಮಾಧ್ಯಮಗೋಷ್ಠಿ ನಡೆಸಿದರು.
“ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಈ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟದ ಜತೆಗೆ ಜನರ ಮಧ್ಯೆ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಪರಿವರ್ತನೆ ಮಾಡಿಕೊಳ್ಳಲು ನಡೆಯುತ್ತಿರುವ ಹುನ್ನಾರದ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಬಾಹಿರವಾಗಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ನಾವು ಕಾನೂನು ಗೌರವಿಸುತ್ತೇವೆ. ದೇಶದ ಕಾನೂನು ನಮಗೆ ರಕ್ಷಣೆ ನೀಡಲಿದೆ ಎಂಬ ವಿಶ್ವಾಸವಿದೆ ಎಂದರು.
“ಹಿಂದುಳಿದ ವರ್ಗದ ನಾಯಕ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗದೇ ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ರು. ರಾಜ್ಯಪಾಲರ ಕಚೇರಿ ಬಿಜೆಪಿ ಪಕ್ಷದ ಕೈಗೊಂಬೆಯಾಗಬಾರದು. ನಮ್ಮ ಸರ್ಕಾರ ಪ್ರತಿ ವರ್ಷ 56 ಸಾವಿರ ಕೋಟಿ ಹಣವನ್ನು ಬಡವರಿಗಾಗಿ ಹಂಚುತ್ತಿದೆ. ಇಂತಹ ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ಈ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಸರ್ಕಾರ ತೆಗೆಯುವ ಹುನ್ನಾರ ನಡೆಯುತ್ತಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ” ಎಂದು ಕಿಡಿಕಾರಿದರು.
ನಮ್ಮ ರಾಜಕೀಯ ಅನುಭವದಲ್ಲಿ ಯಾವುದಾದರೂ ತನಿಖೆಗೆ ಅನುಮತಿ ನೀಡಬೇಕಾದರೆ, ಯಾವುದಾದರೂ ತನಿಖಾ ಸಂಸ್ಥೆಯಿಂದ ಪ್ರಾಥಮಿಕ ತನಿಖೆ ನಡೆಸಿ ಆ ತನಿಖೆಯ ವರದಿಯಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರುವವರ ವಿಚಾರಣೆ ಅಗತ್ಯವಿದೆ ಎಂದು ಮನವರಿಕೆ ಮಾಡಿದ್ದರೆ ಆಗ ವಿಚಾರಣೆ ನಡೆಸಲು ಅನುಮತಿ ನೀಡಬಹುದು. ಆದರೆ ಇಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲನೆ ಆಗಿಲ್ಲ. ಈ ಹಿಂದೆಯೂ ಬೇಕಾದಷ್ಟು ಘಟನೆಗಳಿವೆ ಎಂದರು.