ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ HPV ಲಸಿಕೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

RELATED POSTS

ರಾಯಚೂರು(thenewzmirror.com): ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರುವ ಅಗತ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟದೆ. ಲಸಿಕಾ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ HPV ಲಸಿಕೆ ನೀಡುವುದನ್ನ ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಜಾರಿಗೊಳಿಸುವಂತೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೂ ಕಾರ್ಯಕ್ರಮವನ್ನ  ಕಾರ್ಯಗತಗೊಳಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಈ ವರ್ಷದಿಂದ ಯೋಜನೆಯನ್ನ ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಿದೆ. ದೇಶದಲ್ಲಿಯೇ ಈ ರೀತಿಯ ಕಾರ್ಯಕ್ರಮವನ್ನ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದು ಹೇಳಿದರು. 

ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರ್ಭಿಣಿ ಸ್ತ್ರೀಯರಿಗೆ ವಾತ್ಸಲ್ಯ ತಾಯಿ ಕಿಟ್ ನೀಡಲು ಯೋಜಿಸಲಾಗಿದೆ. ವಿಶೇಷವಾಗಿ ರಾಜ್ಯದಲ್ಲಿ ತಾಯಿ ಮಗುವಿನ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಸ್ತೃತವಾದ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು 360 ಕೋಟಿ ಅನುದಾನವನ್ನ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 8 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ಕಲ್ಯಾಣ ಕರ್ನಾಟಕಕ್ಕೆ ನೀಡಲಾಗಿದೆ. ಮುದಗಲ, ಕವಿತಾಳ, ಜಾಲಹಳ್ಳಿ, ಅರಕೇರಾ ಸೇರಿದಂತೆ ಒಟ್ಟು ನಾಲ್ಕು ಸಮುದಾಯ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಯಿಂದ 50 ಹಾಸಿಗೆಯ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದರು.

ಲಿಂಗಸೂಗೂರು ತಾಲೂಕು ಆಸ್ಪತ್ರೆಯನ್ನು ಜಿಲ್ಲಾ ಮಟ್ಟದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಮಾನ್ವಿ ಹಾಗೂ ರಾಯಚೂರಿನಲ್ಲಿ ನಗರ ಆರೋಗ್ಯ ಕೇಂದ್ರಗಳು ಮಂಜೂರಾಗಿದ್ದು, ಗಟ್ಟೂರು, ಪೋತ್ನಾಳ, ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಮಸ್ಕಿ, ಮತ್ತು ಸಿರಿವಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈ ಬಾರಿಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಕಲ್ಯಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿರುವುದರ ಜೊತೆಗೆ ಈ ಭಾಗದ ಜನರು ಉತ್ತಮ ಆರೋಗ್ಯ ಸೇವೆಗಳನ್ನ ಒದಗಿಸುವಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಒತ್ತು ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಾನ್ವಿಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದು, ದಂತ, ಕಣ್ಣು, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವು ಆರೋಗ್ಯ ಸೇವೆಗಳು ಒಂದಡೆ ಉಚಿತವಾಗಿ ದೊರೆಕಿಸಿಕೊಟ್ಟಿದ್ದಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು. ರಾಜ್ಯದ ಹಲವು ಭಾಗಗಳಿಂದ ತಜ್ಞ ನುರಿತ ವೈದ್ಯಕೀಯ ತಂಡಗಳನ್ನು ಕರೆಸಿ ಅಗತ್ಯ ಚಿಕಿತ್ಸೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಒದಗಿಸಿಕೊಡಲಾಯಿತು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist