ನವದೆಹಲಿ(www.thenewzmirror.com):ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎನ್ನುವುದು ನಿಜ. ಆದರೆ ನಾನೇ ಮುಖ್ಯಮಂತ್ರಿಯಾಗಿ 5 ವರ್ಷ ಅಧಿಕಾರ ಪೂರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ವಾಹನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆಯ ಕುರಿತು ಮಾತನಾಡಿದ ಸಿಎಂ,ಡಿಸಿಎಂ ಡಿಕೆ ಶಿವಕುಮಾರ್ ಕೂಡ ನಮ್ಮ ಜತೆಗಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ನಮ್ಮ ಜತೆಗಿದ್ದರು. ಕೆಲವು ಮಂದಿ ಶಾಸಕರು ಡಿಕೆ ಶಿವಕುಮಾರ್ ಪರ ಬೆಂಬಲ ಸೂಚಿಸಿದ್ದಾರೆ. ಆದರೆ, ಅದು ಕೆಲವೇ ಕೆಲವು ಸಂಖ್ಯೆಯಲ್ಲಿ. ಆದರೆ, ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹಾಗೆಂದು ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನೂ ಅದಕ್ಕೆ ಬದ್ಧನಾಗಿರಬೇಕು, ಡಿಕೆ ಶಿವಕುಮಾರ್ ಅವರೂ ಅಷ್ಟೆ ಎಂದು ಹೇಳಿದರು.
ಪವರ್ ಶೇರಿಂಗ್ ಮಾತುಕತೆಯಾಗಿಲ್ಲ:

ರಾಜ್ಯದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂದು ಹೈಕಮಾಂಡ್ ನಿರ್ಧರಿಸಿತ್ತು ಆದರೆ ಅಂದು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮಾತುಕತೆ ವೇಳೆ ಎರಡೂವರೆ ವರ್ಷದಲ್ಲಿ ಅಧಿಕಾರ ಹಂಚಿಕೆ ಒಪ್ಪಂದವಾಗಿಲ್ಲ, ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವ ಅಥವಾ ಅಧಿಕಾರ ಹಸ್ತಾಂತರ ಮಾಡುವ ವಿಚಾರದಲ್ಲಿ ಹೈಕಮಾಂಡ್ ಯಾವುದೇ ಸುಳಿವು ನೀಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.