ಬೆಂಗಳೂರು, (www.thenewzmirror.com) ;
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ವಲಯವಾರು ಬರುವ ಫ್ರಿಂಟಿಂಗ್ ಯುನಿಟ್ಸ್ ಗಳ ಮೇಲೆ ಆಗಿಂದಾಗ್ಗೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸದಂತೆ ಎಚ್ಚರಿಕೆ ನೀಡಬೇಕು. ಜೊತೆಗೆ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿದಂತೆ ನಾಗರೀಕರಲ್ಲಿ ಹೆಚ್ಚು-ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ರಾತ್ರಿ ವೇಳೆ ಪ್ರಹರಿ ವಾಹನಗಳ ಮೂಲಕ ಗಸ್ತು ತಿರುಗಬೇಕು
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ರಾತ್ರಿ ವೇಳೆ ಹೆಚ್ಚಾಗಿ ಅಳವಡಿಸುತ್ತಾರೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಒಂದು ಪ್ರಹರಿ ವಾಹನವನ್ನು ನಿಯೋಜಿಸಿ ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವ ಮೂಲಕ ಪರಿಶೀಲನೆ ಹಾಗೂ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಅಳವಡಿಸುವುದರ ಮೇಲೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.