ಬೆಂಗಳೂರು(www.thenewzmirror.com):ಮೊನ್ನೆ ಚಿನ್ನಸ್ವಾಮಿ ಕ್ರೀಡಾಂಗಣಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಘಟನೆಯನ್ನು ಡಾ. ರಾಜ್ ಕುಮಾರ್ ಅವರ ನಿಧನದ ದಿನಕ್ಕೆ ಹೋಲಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಜೆಪಿ ನಗರದಲ್ಲಿ ಮಾತನಾಡಿದ ಅವರು, ವರನಟ ಡಾ. ರಾಜ್ ಕುಮಾರ್ ಅವರ ನಿಧನದ ಸಂದರ್ಭದಲ್ಲಿ ಏನೇನು ನಡೆಯಿತೋ ಎನ್ನುವುದು ಈಗಾಗಲೇ ಹೇಳಿದ್ದೇನೆ. ಈ ಸರ್ಕಾರ ಅಣ್ಣಾವ್ರ ನಿಧನದ ವಿಷಯ ಇಟ್ಟುಕೊಂಡು ಕಾಲ್ತುಳಿತ ಪ್ರಕರಣದಲ್ಲಿ ರಕ್ಷಣೆ ಪಡೆಯೋದು ಬೇಡ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ರಾಜ್ ಕುಮಾರ್ ಅವರು ನಿಧನರಾದ ಸಂದರ್ಭದಲ್ಲಿ ಅಶಾಂತಿ ಉಂಟು ಮಾಡಲು ನಿರ್ದಿಷ್ಟವಾಗಿ ಕೆಲವರು ಪ್ರಯತ್ನಪಟ್ಟರು. ಸೀಮೆಎಣ್ಣೆ, ಪೆಟ್ರೋಲ್ ತಂದು ಬೆಂಗಳೂರು ನಗರದಲ್ಲಿ ಶಾಂತಿಯುತವಾಗಿ ನಡೆಯಬೇಕಿದ್ದ ವರನಟರ ಅಂತಿಮಯಾತ್ರೆ, ಅಂತ್ಯ ಸಂಸ್ಕಾರದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡಿದರು. ಆಗ ಗೋಲಿಬಾರ್ ಆಯಿತು. ಇಬ್ಬರು ಸಾವನ್ನಪ್ಪಿದರು. ಅದನ್ನು ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಆ ಘಟನೆಗೂ ಕಾಲ್ತುಳಿತಕ್ಕೆ ಹೋಲಿಕೆ ಮಾಡಬಾರದು ಎಂದು ಅವರು ಹೇಳಿದರು.