ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

RELATED POSTS

ಬೆಂಗಳೂರು(www.thenewzmirror.com):ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದ್ಯತೆಯ ಮೇರೆಗೆ ಆಸಕ್ತಿ ವಹಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಸಚಿವರು ಐದು ಗಂಟೆಗಳಿಗೂ ಹೆಚ್ಚು ಕಾಲ ವಿಡಿಯೋ ಸಭೆ ನಡೆಸಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಪಂಚಾಯತ್‌ ರಾಜ್‌ ಎಂಜನಿಯರಿಂಗ್‌ ಇಲಾಖೆ, ಗ್ರಾಮೀಣ ನೀರು ಸರಬರಾಜು ಇಲಾಖೆ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಂಸ್ಥೆಯ ಮೂಲಕ ನಡೆಯುತ್ತಿರುವ ಕಾಮಗಾರಿಗಳನ್ನು ನಿಯಮಿತವಾಗಿ ಪರಿಶೀಲನೆ ಮಾಡುವ ಹೊಣೆಗಾರಿಕೆಯನ್ನು ಅಧಿಕಾರಿಗಳು ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕೆಂದು ಸಲಹೆ ಮಾಡಿದರು.  

ಈ ತಿಂಗಳ 15ರಿಂದ 31ರವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ತೀವ್ರ ಪ್ರವಾಸ ಮಾಡಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಬೇಕಲ್ಲದೆ, ಕೆಲವಾರು ಕಡೆ ಕಾಮಗಾರಿಗಳು ಕುಂಠಿತಗೊಂಡಿದ್ದು ಅವುಗಳಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಪೂರ್ಣ ವಿವರಗಳನ್ನು ಒಳಗೊಂಡ ವರದಿಯನ್ನು ಆಗಸ್ಟ್‌ ಮೊದಲ ವಾರದಲ್ಲಿ ಸರ್ಕಾರಕ್ಕೆ ರವಾನಿಸಬೇಕೆಂದು ಸಚಿವರು ಆದೇಶ ನೀಡಿದರು. 

ಹಸಿರುಪಥ: ಮಳೆಗಾಲದಲ್ಲಿ ಗಿಡ ನೆಡಲು ಕ್ರಮ ಆಗಲಿ

ರಸ್ತೆ ಬದಿ ಗಿಡ ನೆಡುವ ʼಹಸಿರು ಪಥʼ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಾಗಿದೆ, ಮಳೆಗಾಲ ಮುಗಿಯುವುದರೊಳಗೆ ಗಿಡಗಳನ್ನು ನೆಡಲು ನರೇಗಾ ಮೂಲಕ ವ್ಯಾಪಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಜಿಲ್ಲೆಗಳಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಅಧಿಕಾರಿಗಳೊಂದಿಗೆ ಚರ್ಚಿಸಿ ಸಸಿಗಳನ್ನು ನೆಡಬೇಕಾದ ಗ್ರಾಮೀಣ ರಸ್ತೆಗಳನ್ನು ನಿರ್ಣಯಿಸಬೇಕೆಂದು ಸಚಿವರು ಸೂಚಿಸಿದರು. 

ಮಳೆಗಾಲ ಆರಂಭಗೊಂಡಿದ್ದು ಕೆಲವೆಡೆ ವ್ಯಾಪಕ ಮಳೆ ಆಗುತ್ತಿದೆ, ಮುಂದಿನ ಕೆಲವು ತಿಂಗಳು ಮಳೆ ಆಗುವ ಮುನ್ಸೂಚನೆಯಿದ್ದು, ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿರುವುದರಿಂದ ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು, ಜಲಮೂಲಗಳ ಬಳಿ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರಲ್ಲದೆ, ನೀರು ಕಲುಷಿತಗೊಂಡು ಯಾವುದೇ ದುಷಪರಿಣಾಮಗಳಾದಲ್ಲಿ ಎಂಜನಿಯರ್‌ಗಳು, ಇಒ ಹಾಗೂ ಪಿಡಿಒಗಳನ್ನು ಹೊಣೆಯಾಗಿಸಲಾಗುವುದೆಂದು ಎಚ್ಚರಿಕೆ ನೀಡಿದರು. 

ಘನತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಬರತ್ತಿವೆ, ಜಿಲ್ಲಾ ಮಟ್ಟದಲ್ಲಿ ಆ ಪ್ರದೇಶಗಳಿಗೆ ಅನುಗುಣವಾಗಿ ತ್ಯಾಜ್ಯ ನಿರ್ವಹಣೆಗೆ ಮಾರ್ಗೋಪಾಯಗಳನ್ನು ಕಂಡು ಹಿಡಿದು ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಲಹೆ ಮಾಡಿದರು. 

ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಿ:

ಸಾರ್ವಜನಿಕರು ನೀಡುವ ದೂರು, ಮನವಿಗಳನ್ನು ಆದ್ಯತೆಯ ಮೇಲೆ ಪರಿಹರಿಸಬೇಕೆಂದು ನಿರ್ದೇಶಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌, ಇಲಾಖೆಯ ಕಾರ್ಯದರ್ಶಿ ಸಮೀರ್‌ ಶುಕ್ಲ, ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್‌ ಚರ್ಚೆಯಲ್ಲಿ ಪಾಲ್ಗೊಂಡರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist