ಬೆಂಗಳೂರು,(www.thenewzmirror.com) ;
ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಹೇಳಿದರು.
ಸೆಪ್ಟಂಬರ್ 6 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಭಾರತೀಯ ಜನತಾ ಪಕ್ಷದ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರಿರುವ ದೊಡ್ಡ ಪಕ್ಷ, ಕಳೆದ ಬಾರಿ 7 ಕೋಟಿ ಜನರು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬಾರಿ 10 ಕೋಟಿ ಸದಸ್ಯರನ್ನು ಮಾಡುವ ಗುರಿಯೊಂದಿಗೆ ನಮ್ಮ ರಾಷ್ಟ್ರೀಯ ನಾಯಕರು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಅವರ ಜನಪ್ರೀಯತೆ ಎಷ್ಟಿದೆ ಎಂದರೆ, ಪಂಡಿತ್ ಜವಾಹರಲಾಲ್ ನೆಹರು ಅವರ ನಂತರ ಸತತ ಮೂರನೆ ಬಾರಿಗೆ ಪ್ರಧಾನಿಯಾಗಿರುವ ದಾಖಲೆ ಇವರದ್ದಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಅತ್ಯಂತ ಬಲಿಷ್ಠವಾಗಿ ಬೆಳೆಯುತ್ತಿರುವ ಪಕ್ಷ ಬಿಜೆಪಿ. ವಿರೋಧ ಪಕ್ಷಗಳು ಎಷ್ಟೇ ಅಪಪ್ರಚಾರ ಮಾಡಿದರೂ ಭಾರತದ ಜನ ಹಾಗೂ ಕರ್ನಾಟಕದ ಜನರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು.
ಒಂದು ವಿಪರ್ಯಾಸ ಏನಂದರೆ ನಾವು ಮೂರನೇ ಬಾರಿ ಅಧಿಕಾರ ನಡೆಸುತ್ತಿರುವಾಗ 50 ಸ್ಥಾನ ಗಳಿಸಿದ್ದ ಕಾಂಗ್ರೆಸ್ 99 ಸ್ಥಾನ ಗಳಿಸಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದರು. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಹಾವೇರಿ ಲೋಕಸಭಾ ಸದಸ್ಯನಾಗಿ ದೆಹಲಿ ಸಂಸತ್ತಿನಲ್ಲಿ ಪಾಲ್ಗೊಳ್ಳುವಂತಾಗಿದೆ. ಯಾವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆಯೋ ಅಲ್ಲಿನ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಮತ್ತೆ ಅಧಿಕಾರ ಹಿಡಿಯಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿಯವರು ನಾಲ್ಕನೇ ಬಾರಿಗೂ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.