ಬೆಂಗಳೂರು, (www.thenewzmirror.com) ;
ಮೂಡ ಪ್ರಕರಣದಲ್ಲಿ ಇದೀಗ ರಾಜ್ಯಪಾಲರಿಂದ ತನಿಖೆಗೆ ಅನುಮತಿ ಸಿಕ್ಕ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಅದೇ ರೀತಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎನ್ನುವ ಕೂಗುಗಳೂ ಕೇಳಿಬರುತ್ತಿವೆ. ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಒತ್ತಾಯ ಮಾಡ್ತಿದ್ರೆ ಪಶ್ಚಿಮ ಬಂಗಾಳ ದಲ್ಲಿ ಸಾಮಾನ್ಯ ಮಹಿಳೆ ಆಗ್ರಹ ಮಾಡ್ತಿದ್ದಾರೆ.
ಹೌದು, ಪಶ್ಚಿಮ ಬಂಗಾಳದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾದೇವಿ ಅವರು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತನ್ನ ಅಧಿಕಾರವನ್ನು ಬಳಸುವ ಬದಲು ಮಮತಾ ಬ್ಯಾನರ್ಜಿ ಅವರು ಸಾರ್ವಜನಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಶಾದೇವಿ ಆರೋಪಿಸಿದ್ದಾರೆ.
ಅವರೊಬ್ಬ ಮಹಿಳೆ, ರಾಜ್ಯದ ಮುಖ್ಯಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ ಕಾರಣ ಅವರು ರಾಜೀನಾಮೆ ನೀಡಬೇಕು ಆಶಾದೇವಿ ಆರೋಪಿಸಿದ್ದಾರೆ.
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದಿದ್ದಾಗ ಮತ್ತು ಅಂತಹ ಅನಾಗರಿಕತೆ ಅವರ ವಿರುದ್ಧ ನಡೆದಾಗ, ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು ಎಂದಿದ್ದಾರೆ.
ಪ್ರಶಿಕ್ಷಣಾರ್ಥಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಂದ ಒಂದು ದಿನದ ನಂತರ ಅಪರಾಧಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಇದಾದ ಬಳಿಕ ಕಲ್ಕತ್ತಾ ಹೈಕೋರ್ಟ್‌ನಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಪ್ರಕರಣ ನಿಯೋಜಿಸಿರುವುದು ಪೊಲೀಸ್ ತನಿಖೆಯಲ್ಲಿನ ನ್ಯೂನತೆಗಳನ್ನು ಉಲ್ಲೇಖಿಸಿದೆ ಎಂದು ದೂರಿದ್ದಾರೆ.