ಬೀದರ್(www.thenewzmirror.com) : ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದವರು ಇಂದು ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೀದರ್ ನ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ. ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.
ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು. ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.
ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ; ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.
ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.
ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.