ಬೆಂಗಳೂರು(www.thenewzmirror.com): ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ನಿಷೇಧ ಮಾಡುತ್ತೇವೆ ಎನ್ನುವ ಹುಚ್ಚುತನದ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆ ಸಂಬಂಧ ದೇಶದ ಜನರ ಕ್ಷಮಾಪಣೆ ಕೇಳಬೇಕೆಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ.
ಮೊದಲನೆಯದಾಗಿ ನೀವು ಅಧಿಕಾರಕ್ಕೆ ಬರುವುದು ಕನಸಿನ ಮಾತು. ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಇಂಥ ಹುಚ್ಚುತನದ ಹೇಳಿಕೆ ಕೊಟ್ಟು ಜನರ ಮುಂದೆ ಹಗುರ ಆಗದಿರಿ ಎಂದು ಸಲಹೆ ನೀಡಿದರು.
ಇಡೀ ದೇಶದ ಉದ್ದಗಲಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ನಾವೆಲ್ಲರೂ ಬೆಳೆದವರು ಎಂದು ಯಡಿಯೂರಪ್ಪ ಗಮನ ಸೆಳೆದರು.